ಪುರಂದರದಾಸರ ಪುಣ್ಯದಿನ

ಜೀವನ

ಜನನ ಇವರ ಮೊದಲ ಹೆಸರು ಶ್ರೀನಿವಾಸ ನಾಯಕ, ತಂದೆ ವರದಪ್ಪನಾಯಕ, ತಾಯಿ ಲಕ್ಷ್ಮಿದೇವಿ. ಪುರಂದರದಾಸರ ತಂದೆ ವರದಪ್ಪ ನಾಯಕ ಲೇವಾದೇವಿ ವೃತ್ತಿಯಲ್ಲಿದ್ದವರು. ಅನೇಕ ವರ್ಷಗಳ ಕಾಲ ಮಕ್ಕಳಾಗದ ಕಾರಣ ತಿರುಪತಿ ಶ್ರೀನಿವಾಸನಿಗೆ ಪ್ರಾರ್ಥನೆ ಸಲ್ಲಿಸಿದ ಮೇಲೆ ಮಗುವಾಯಿತು ಎಂಬ ನಂಬಿಕೆಯಿದೆ. ಇವರು ನಾಯಕ ಜನಾಂಗದವರಿಂದಲೇ ಅವರು ಮಗನಿಗೆ ಶ್ರೀನಿವಾಸ ನಾಯಕ ಎಂದು ಹೆಸರಿಟ್ಟರಂತೆ.

ಜನ್ಮ ಸ್ಥಳ

ಮೊದಲು ಮಹಾರಾಷ್ಟ್ರದ ಪುರಂದರಗಢವು ಪುರಂದರದಾಸರ ಜನ್ಮಸ್ಥಳವೆಂದು ನಂಬಲಾಗಿತ್ತು. ತಜ್ಞರ ವರದಿಯ ಪ್ರಕಾರ ಪುರಂದರಗಢವು ಪುರಂದರ ಎಂಬ ಹೆಸರನ್ನು ಊರಿನ ಹೆಸರಿನಲ್ಲಿ ಮಾತ್ರ ಹೊಂದಿದ್ದು ಪುರಂದರ ದಾಸರ ಕುರಿತು ಯಾವುದೇ ಐತಿಹಾಸಿಕ-ಸಾಂಸ್ಕೃತಿಕ ದಾಖಲೆ ಹೊಂದಿಲ್ಲ. ತೀರ್ಥಹಳ್ಳಿ ತಾಲೂಕಿನ ಆರಗ ಊರು ಪುರಂದರ ದಾಸರ ಕುರಿತು ಹಲವು ಐತಿಹಾಸಿಕ ಸಾಕ್ಷ್ಯಗಳನ್ನು ಹೊಂದಿದ್ದು ಆರಗವೇ ಪುರಂದರ ದಾಸರ ಜನ್ಮಸ್ಥಳವೆಂದು ಕರ್ನಟಕ ಸರ್ಕಾರಕ್ಕೆ ೨೦೧೮ರಲ್ಲಿ ವರದಿ ಸಲ್ಲಿಸಿದೆ.

ವೈರಾಗ್ಯ

ಶ್ರೀನಿವಾಸ ನಾಯಕ ಬೆಳೆದ ನಂತರ ತಂದೆಯ ವೃತ್ತಿಯನ್ನೇ ಮುಂದುವರಿಸಿದ. ಆದರೆ ಅತ್ಯಂತ ಜಿಪುಣನೆಂದು ಹೆಸರಾದ ಶ್ರೀನಿವಾಸ, ತಂದೆ ಅಸ್ವಸ್ಥರಾದಾಗಲೂ ಹಣ ಖರ್ಚು ಮಾಡಲು ತಡೆದನಂತೆ. ಶ್ರೀನಿವಾಸನ ಪತ್ನಿ ಸರಸ್ವತಿ ದಾನಶೀಲೆಯಾಗಿ, ಪತಿಯ ಕೋಪ ಅವಳ ಮೇಲೆ ಬೀಳುತ್ತಿತ್ತು ಎಂದು ಹೇಳುತ್ತಾರೆ. ಜೀವನದಲ್ಲಿನ ಆಕಸ್ಮಿಕ ತಿರುವಿನಿಂದ ಶ್ರೀನಿವಾಸ ತನ್ನ ಶ್ರೀಮಂತಿಕೆಯನ್ನು ತೊರೆದು ಹರಿದಾಸನಾಗುವ ನಿರ್ಧಾರ ತೆಗೆದುಕೊಂಡನಂತೆ. ನಂತರ ಶ್ರೀನಿವಾಸ ನಾಯಕ 'ಪುರಂದರದಾಸ' ಎಂಬ ಹೆಸರನ್ನು ಪಡೆದರು. ಅವರ ಸಂಸಾರ ಮೂಲತಃ ಪಂಡರಾಪುರದಲ್ಲಿದ್ದರೂ ಶ್ರೀನಿವಾಸ ನಂತರದ ವರ್ಷಗಳಲ್ಲಿ ಹಂಪೆಯಲ್ಲಿದ್ದನೆಂದು ತೋರುತ್ತದೆ.

ಪುರಂದರದಾಸರ ಪದಗಳು ಮುಂದೆ ಕರ್ನಾಟಕ ಸಂಗೀತ ಪದ್ಧತಿಯ ಬುನಾದಿಯಾದವು. ಶಾಸ್ತ್ರೀಯ ಸಂಗೀತವನ್ನು ಶ್ರೀ ಸಾಮಾನ್ಯನಿಗೆ ಪರಿಚಯ ಮಾಡಿಕೊಡಲು ಯತ್ನಿಸಿದ ಪುರಂದರದಾಸರು ಮಾಯಾಮಾಳವಗೌಳ ರಾಗದಿಂದ ಹಿಡಿದು ಹೊಸಬರಿಗೆ ಶಾಸ್ತ್ರೀಯ ಸಂಗೀತವನ್ನು ಕಲಿಸಿ ಕೊಡುವ ದಾರಿಯ ಬಗೆಗೆ ಯೋಚಿಸಿದರು. ಈಗಲೂ ದಕ್ಷಿಣ ಭಾರತದ ಶಾಸ್ತ್ರೀಯ ಸಂಗೀತದ ಪಾಠಗಳು ಪುರಂದರದಾಸರ ಸರಳೆ, ಜಂಟಿ ವರಸೆಗಳೊಂದಿಗೇ ಆರಂಭಿಸಲ್ಪಡುತ್ತವೆ. ಪುರಂದರದಾಸರ 'ಪಿಳ್ಳಾರಿ ಗೀತೆಗಳು' ಸಂಗೀತದ ಸ್ವರ- ಸಾಹಿತ್ಯ- ತಾಳಗಳ ಸಂಯೋಜನೆಯನ್ನು ಅಭ್ಯಸಿಸಲು ಮೊದಲ ಮೆಟ್ಟಿಲು. ಕರ್ನಾಟಕ ಶಾಸ್ತ್ರೀಯ ಸಂಗೀತದ ತ್ರಿಮೂರ್ತಿಗಳಲ್ಲೊಬ್ಬರಾದ ಶ್ರೀ ತ್ಯಾಗರಾಜರು ತಮ್ಮ "ಪ್ರಹ್ಲಾದ ಭಕ್ತಿ ವಿಜಯಮ್" ಎಂಬ ಲೇಖನದಲ್ಲಿ ಶ್ರೀ ಪುರಂದರ ದಾಸರನ್ನು ತಮ್ಮ ಸಂಗೀತ ಗುರುಗಳೆಂದು ಹೇಳಿಕೊಂಡಿದ್ದಾರೆ. ಹರಿನಾಮಸ್ಮರಣೆಯ ರೂಪದಲ್ಲಿ ರಚಿಸಿದ ಅವರ ಕೃತಿಗಳು ದೇವರನಾಮಗಳಾಗಿ ಪ್ರಸಿದ್ಧವಾಗಿವೆ. ಅವರ ಹರಿಭಕ್ತಿ ಹಾಗೂ ಸಂಗೀತದಲ್ಲಿನ ಪಾಂಡಿತ್ಯ ಕನ್ನಡ ಸಾಹಿತ್ಯದಲ್ಲೇ ವಿಶಿಷ್ಟವಾದ ಸ್ಥಾನವನ್ನು ಪಡೆದು ದಾಸಸಾಹಿತ್ಯವನ್ನು ಶ್ರೀಮಂತವಾಗಿಸಿವೆ.

ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹರಾದ ಪುರಂದರದಾಸರ ಸಾಧನೆಯನ್ನು ಕಂಡ ಸರ್ವರೂ 'ದಾಸರೆಂದರೆ ಪುರಂದರದಾಸರಯ್ಯಾ..!' ಎಂದು ಕೊಂಡಾಡಿದ್ದಾರೆ. ಇವರ ಎಲ್ಲ ಕೀರ್ತನೆಗಳೂ ಕನ್ನಡ ಭಾಷೆಯಲ್ಲಿದ್ದು, ಭಕ್ತಿ ಮಾರ್ಗವನ್ನು ಜನಸಾಮಾನ್ಯರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಿವೆ. ಕರ್ನಾಟಕ ಸಂಗೀತಗಾರರಲ್ಲಿ ಪುರಂದರದಾಸರ ಕೀರ್ತನೆಗಳ ಪರಿಚಯ ಇಲ್ಲದವರು ಇಲ್ಲವೇ ಇಲ್ಲವೆನ್ನಬಹುದು. ಶ್ರೀ ಪುರಂದರದಾಸರು ಲಕ್ಷ ಹಾಡುಗಳನ್ನು ರಚನೆ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡಿದ್ದರು; ಅವರು ,೭೫,೦೦೦ ಹಾಡುಗಳನ್ನು ರಚನೆ ಮಾಡಿ ಅವತಾರ ಮುಗಿಸಿದರು; ಅವರ ಮಗ ಮಧ್ವಪತಿದಾಸರು ಉಳಿದ ೨೫,೦೦೦ ಹಾಡುಗಳನ್ನು ರಚನೆ ಮಾಡಿದರು ಎಂದು ಹೇಳಲಾಗುತ್ತಿದೆ.