ದೀಪಾವಳಿ

ಬೆಳಕಿನ ಹಬ್ಬ ಎಂದೇ ಪರಿಗಣಿತವಾಗಿರುವ ದೀಪಾವಳಿಯನ್ನು ಮೂರು ದಿನಗಳ ಹಬ್ಬವಾಗಿ ಆಚರಿಸಲ್ಪಡುತ್ತದೆ .ನರಕ ಚತರ್ದಶಿಯ ಹಿಂದಿನ ದಿನವನ್ನು ನೀರು ತುಂಬುವ ಹಬ್ಬ ಎಂದೂ ಕೂಡ ಕೆಲವು ಕಡೆಗಳಲ್ಲಿ ಆಚರಿಸಲಾಗುತ್ತದೆ. ದೀಪಾವಳಿ ಹಬ್ಬದ ಮೊದಲ ದಿನ ಎಣ್ಣೆ ಸ್ನಾನ ಮಾಡುವ ಸಂಪ್ರದಾಯವಿದೆ. ಇದಕ್ಕೆ ಕಾರಣ ಸಮುದ್ರಮಥನದ ಸಮಯದಲ್ಲಿ ಶ್ರೀವಿಷ್ಣು ಅಮೃತಕಲಶದೊಡನೆ ಧನ್ವಂತರಿಯಾಗಿ ಅವತಾರವೆತ್ತಿದ ಎಂಬ ನಂಬಿಕೆ. ಈ ದಿನ ತುಂಬುವ ಸ್ನಾನದ ನೀರಿನಲ್ಲಿ ಗಂಗೆಯೂ, ಎಣ್ಣೆಯಲ್ಲಿ ಧನಲಕ್ಷ್ಮೀಯೂ ಇರುತ್ತಾಳೆಂಬುದು ನಂಬಿಕೆ. ಈ ನೀರಿನಿಂದ ಸ್ನಾನಮಾಡಿದರೆ ಆಯುರಾರೋಗ್ಯ ಆಯಸ್ಸು ವೃದ್ಧಿಸುವುದೆಂದೂ ಮತ್ತು ಸಕಲ ಪಾಪಗಳೂ ನಿವಾರಣೆಯಾಗುವುದೆಂಬ ನಂಬಿಕೆಯಿದೆ. ನರಕಾಸುರನನ್ನು ಕೊಂದ ಪಾಪ ಪರಿಹಾರಕ್ಕಾಗಿ ಶ್ರೀಕೃಷ್ಣ ಕೂಡ ಈ ದಿನ ಎಣ್ಣೆಸ್ನಾನ ಶಾಸ್ತ್ರ ಮಾಡಿದ್ದನು ಎಂದು ಹೇಳಲಾಗುತ್ತದೆ.

ಹಬ್ಬದ ಮೊದಲ ದಿನ ನರಕಚತುದರ್ಶಿಯಾಗಿದ್ದು, ನರಕ ಚತುರ್ದಶಿಯ ಕೇಂದ್ರಬಿಂದುವೇ ನರಕಾಸುರ. ಮಹಾವಿಷ್ಣು ತನ್ನ ವರಾಹವತಾರದಲ್ಲಿದ್ದಾಗ ಅವನ ಶರೀರದಿಂದ ಒಂದು ತೊಟ್ಟು ಬೆವರು ಭೂಮಿಗೆ ಬೀಳಲಾಗಿ ಭೂದೇವಿಯಲ್ಲಿ ನರಕಾಸುರ ಜನಿಸುತ್ತಾನೆ. ಇದರಿಂದಾಗಿ ಅವನಿಗೆ ಭೌಮಾಸುರ, ಭೂಮಿಪುತ್ರ ಎಂಬ ಹೆಸರುಗಳೂ ಉಂಟು. ಭೂದೇವಿ ವಿಷ್ಣುವನ್ನು ಬೇಡಿ ತನ್ನ ಮಗ ನರಕಾಸುರನಿಗೆ ವೈಷ್ಣವಾಸ್ತ್ರವನ್ನು ವರವಾಗಿ ಕೊಡಿಸುತ್ತಾಳೆ. ಇದರಿಂದ ಬಲಿಷ್ಠನಾದ ನರಕಾಸುರ ಲೋಕಕಂಠಕನಾಗುತ್ತಾನೆ. ಇಂದ್ರ ಮತ್ತು ಅವನ ತಾಯಿ ಅಧಿತಿಯನ್ನೂ ಬಿಡದೆ ಕಾಡತೊಡಗಿದಾಗ ಇಂದ್ರ, ಶ್ರೀಕೃಷ್ಣನ ಮೊರೆಹೋಗುತ್ತಾನೆ.

ನರಕಾಸುರನ ದುಷ್ಟತನ ತಾಯಿ ಭೂದೇವಿಗೂ ಸಹಿಸದಾದಾಗ ಈ ದುಷ್ಟ ಮಗನನ್ನು ಕೊಂದು ಲೋಕವನ್ನು ಕಾಪಾಡುವಂತೆ ಭೂದೇವಿ ಶ್ರೀಕೃಷ್ಣನನ್ನು ಕೇಳಿ ಕೊಳ್ಳುತ್ತಾಳೆ. ಅಶ್ವಯುಜಕೃಷ್ಣ ಚತುರ್ದಶಿಯ ಕಗ್ಗತ್ತಲಿನಲ್ಲಿ ಶ್ರೀಕೃಷ್ಣನು ನರಕಾಸುರನನ್ನು ಸಂಹರಿಸಿದ ಎನ್ನುವುದು ಪೌರಾಣಿಕ ನಂಬಿಕೆ. ಆ ದಿನವೇ ನರಕ ಚತುರ್ದಶಿ. ದುಷ್ಟ ಸಂಹಾರದ ಸಂಕೇತವಾಗಿ ಆ ದಿನ ಪಟಾಕಿ ಸಿಡಿಸಿ ಎಲ್ಲರೂ ಖುಷಿಪಡುತ್ತಾರೆ. ಹಾಗೆಯೇ ನರಕಾಸುರನನ್ನು ಕೊಂದು ಅವನ ಬಂಧನದಲ್ಲಿದ್ದ ಸಾವಿರಾರು ಕನ್ಯೆಯರನ್ನು ಶ್ರೀಕೃಷ್ಣ ಬಂಧಮುಕ್ತಗೊಳಿಸಿದ್ದರಿಂದಾಗಿ ಕನ್ಯಾಸೆರೆ ಬಿಡಿಸಿದ ಶ್ರೀಕೃಷ್ಣ ಸ್ವರೂಪಿಯಾದ ಅಳಿಯಂದಿರನ್ನು ಕನ್ಯಾಪಿತೃಗಳು ಈ ಹಬ್ಬದಂದು ತಮ್ಮ ಮನೆಗೆ ಆಹ್ವಾನಿಸಿ ವಿಶೇಷವಾಗಿ ಆಧರಿಸಿ ಉಪಚರಿಸುವ ಸಂಪ್ರದಾಯವನ್ನು ಕೂಡ ಈ ದಿನ ಕಾಣಬಹುದಾಗಿದೆ.

ನರಕ ಚತುರ್ದಶಿಯ ಮಾರನೆಯ ದಿನ ಅಂದರೆ ದೀಪಾವಳಿಯ ಎರಡನೇ ದಿನ, ದೀಪಾವಳಿ ಅಮಾವಾಸ್ಯೆಯಾಗಿದ್ದು, ಅವತ್ತು ಲಕ್ಷ್ಮಿಪೂಜೆಯನ್ನು ಮಾಡಲಾಗುತ್ತದೆ. ಮಹಾವಿಷ್ಣುವಿನ ಪತ್ನಿಯೂ ಆದ ಮಹಾಲಕ್ಷ್ಮಿಯನ್ನು ಆರಾಧಿಸುವ ಹಬ್ಬವೇ ಧನಲಕ್ಷ್ಮೀ ಪೂಜೆ. ಇದು ಸಮುದ್ರ ಮಥನದಿಂದ ಲಕ್ಷ್ಮೀ ಉದಯಿಸಿದ ದಿನವೂ ಹೌದು. ಮುಖ್ಯವಾಗಿ ಉತ್ತರ ಭಾರತದಲ್ಲಿ ಇದರ ಆಚರಣೆ ಹೆಚ್ಚು. ವ್ಯಾಪಾರಿಗಳಿಗೆ ದೀಪ ಲಕ್ಷ್ಮೀ ಬೆಳಗಿ ಧನಲಕ್ಷ್ಮೀ ಬರುವ ಭಾಗ್ಯದ ದಿನವೇ ಆಗಿದೆ. ಅವರಿಗೆ ವ್ಯಾಪಾರ ವಹಿವಾಟಿನ ವಾಣಿಜ್ಯದ ನೂತನ ವರ್ಷ ಉದಯಿಸುವುದೇ ಈ ದಿನ. ಹಾಗಾಗಿ ಅತ್ಯಂತ ಸಂತೋಷದಿಂದ ಕಾರ್ತಿಕ ಮಾಸದ ಆರಂಭದ ಈ ಅಮಾವಾಸ್ಯೆಯ ಮಹಾರಾತ್ರಿಯಲ್ಲಿ ಮಹಾಲಕ್ಷ್ಮೀಗೆ ಮಹದಾನಂದದಿಂದ ದೀಪಾರಾಧನೆಯೊಡನೆ ಲಕ್ಷ್ಮೀಪೂಜೆಯನ್ನು ಮಾಡುತ್ತಾರೆ. ಈಗ ಕರ್ನಾಟಕದಲ್ಲಿ ಕೂಡ ಈ ಆಚರಣೆ ವ್ಯಾಪಕವಾಗಿ ವಿಸ್ತರಿಸಿ ಕೊಂಡಿದೆ.

ಹಬ್ಬದಲ್ಲಿ ಮೂರನೆಯ ದಿನವನ್ನು ಬಲಿಪಾಡ್ಯಮಿಯಾಗಿ ಆಚರಿಸಲಾಗುತ್ತಿದೆ. ಆವತ್ತು ಬಲಿಚಕ್ರವರ್ತಿ ಭೂಲೋಕ ಸಂಚಾರ ಬರುತ್ತಾನೆ ಎಂಬ ನಂಬಿಕೆಯೂ ಇದೆ. ಅಂದು ಬಲೀಂದ್ರ ಪೂಜೆಯೂ ನಡೆಯುತ್ತದೆ. ಪೌರಾಣಿಕ ಕಥೆಯ ಪ್ರಕಾರ ಮಹಾವಿಷ್ಣುಭಕ್ತ ದಾನಶೂರ ದೈತ್ಯರಾಜ ಬಲಿ ಚಕ್ರವರ್ತಿಯ ಬಳಿಗೆ ವಾಮನ ಅವತಾರಿಯಾಗಿ ಬಂದ ಮಹಾವಿಷ್ಣು, ಬಲಿಯಿಂದ ಮೂರು ಹೆಜ್ಜೆ ಊರುವಷ್ಟು ಭೂಮಿಯನ್ನು ದಾನವಾಗಿ ಪಡೆದು ಎರಡು ಹೆಜ್ಜೆಗಳಲ್ಲಿ ಆಕಾಶ ಭೂಮಿಗಳನ್ನು ಅಳೆದುಕೊಂಡು ತ್ರಿವಿಕ್ರಮನಾಗಿ ಬೆಳೆದು ಮೂರನೇ ಹೆಜ್ಜೆಯನ್ನು ಬಲಿಯ ಕೋರಿಕೆಯಂತೆ ಅವನ ತಲೆಯ ಮೇಲಿಟ್ಟು ಬಲಿಚಕ್ರವರ್ತಿಯನ್ನು ಪಾತಾಳಕ್ಕೆ ತುಳಿದುಬಿಡುತ್ತಾನೆ. ಆಗ ಬಲಿಯ ಭಕ್ತಿಯನ್ನು ಮತ್ತು ದಾನಶೀಲಗುಣವನ್ನು ಮೆಚ್ಚಿದ ವಿಷ್ಣು ಪ್ರತಿವರ್ಷ ಒಂದು ದಿನ ಅವನ ಹೆಸರಿನಲ್ಲಿ ಪೂಜೆ ನಡೆಯುವಂತೆ ವರ ನೀಡುತ್ತಾನೆ. ಆ ರೀತಿ ಆಚರಿಸಲ್ಪಡುವ ದಿನವೇ ಬಲಿಪಾಡ್ಯಮಿ. ಅಂದು ಬಲಿ ಚಕ್ರವರ್ತಿ ಭೂಲೋಕ ಸಂಚಾರಕ್ಕೆ ಬರುತ್ತಾನೆಂಬ ನಂಬಿಕೆಯಲ್ಲಿ ಬಲೀಂದ್ರಪೂಜೆ ನಡೆಯುತ್ತದೆ.

ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲಪಾಡ್ಯಮಿ ಶ್ರೀಕೃಷ್ಣನು ಇಂದ್ರನನ್ನು ಸೋಲಿಸಿದ ದಿನ ಕೂಡ ಹೌದು. ಇಂದ್ರನ ದಾಳಿಯಿಂದ ತನ್ನ ಗೋಸಮೂಹವನ್ನು ರಕ್ಷಿಸಲು ಶ್ರೀಕೃಷ್ಣನು ಗೋವರ್ಧನ ಗಿರಿಯನ್ನೆತ್ತಿದ ದಿನವಿದು. ಆದ್ದರಿಂದಲೇ ಅಂದು ಗೋಪೂಜೆ ಮತ್ತು ಗೋವರ್ಧನ ಪೂಜೆಯನ್ನು ಆಚರಿಸಲಾಗುತ್ತದೆ. ಕೆಲವೆಡೆ ರೈತರು ಇದನ್ನು ಹಟ್ಟಿಹಬ್ಬವೆಂದು ಕೂಡ ಆಚರಿಸುತ್ತಾರೆ.

ದೀಪಾವಳಿ ಎಂದರೆ ಹಣತೆಗಳ ಸಾಲು, ದೀಪಗಳ ಜಗಮಗ, ಪಟಾಕಿಗಳು ಸೃಷ್ಟಿಸುವ ನಕ್ಷತ್ರಲೋಕ. ಬದುಕಿನ ಒಳಗೂ ಹೊರಗೂ ಬಣ್ಣದ ಬೆಳಕು ಹರಿಸಿ ಸಂತೋಷ, ಆತ್ಮವಿಶ್ವಾಸ ಹೆಚ್ಚಿಸುವ, ಹೊಸತನದೆಡೆಗೆ ತುಡಿಯುವಂತೆ ಮಾಡುವ ಹಬ್ಬ. ಬೆಳಕು ಬರೀ ಕಣ್ಣಿಗಲ್ಲ. ಮುಚ್ಚಿದ ಮನದ ಬಾಗಿಲೊಳಗೂ ಬೆಳಕಿನ ಕಿರಣಗಳು ಸೋಕುತ್ತವೆ. ಹೊಸ ಬೆಳಕು ಚೆಲ್ಲಿ, ಹಳೆ ನೋವು ಸಂಕಟಗಳನ್ನು ಕಿತ್ತುಹಾಕಿ ಸಂಭ್ರಮಕ್ಕೆ ಅಣಿ ಮಾಡುತ್ತವೆ. ಬೆಳಗುವ ಪ್ರತಿ ದೀಪದಲ್ಲಿ, ಸಿಡಿಯುವ ನಕ್ಷತ್ರಗಳಲ್ಲಿ ಸಡಗರ ಕೇಕೆ ಹೊಡೆಯುತ್ತದೆ. ದೀಪಾವಳಿ ನಿಜಾರ್ಥದಲ್ಲಿ ಕುಟುಂಬದ ಹಬ್ಬ. ಪುಟ್ಟ ಮಗುವಿನಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲರನ್ನೂ ಎದ್ದು ನಿಲ್ಲಿಸುವಂತೆ ಮಾಡುವ ಚೆಲುವು ಇಲ್ಲಿದೆ. ಸಂಬಂಧಗಳು ದೂರವಾಗುತ್ತಿರುವ ಈ ಕಾಲದಲ್ಲೂ ಕುಟುಂಬದ ಎಲ್ಲರೂ ಜತೆ ಸೇರಲು, ಖುಷಿಪಡಲು, ಜತೆಯಾಗಿ ಊಟ ಸವಿಯಲು, ಕುಣಿದಾಡಲು ವೇದಿಕೆ ಕೊಡುವುದು ದೀಪಾವಳಿ. ಆಶೀರ್ವಾದದ ಮೂಲಕ ಹಿರಿಯರು ಎತ್ತರಕ್ಕೇರುತ್ತಾರೆ, ಎಣ್ಣೆ ಸ್ನಾನದ ಮೂಲಕ ತಾಯಿ-ಮಕ್ಕಳು, ಗಂಡ-ಹೆಂಡತಿ ಹತ್ತಿರವಾಗುತ್ತಾರೆ. ಒಲವಿನ ಅಡುಗೆ ಎಲ್ಲರನ್ನೂ ಒಂದು ಮಾಡುತ್ತದೆ. ಹಬ್ಬದ ಹೆಸರಲ್ಲಿ ಮಗಳು-ಅಳಿಯ ಮನೆಗೆ ಬರುತ್ತಾರೆ. ಕೊನೆಯ ದಿನ ಅಣ್ಣ ತಂಗಿಯ ಮನೆಗೂ ಹೋಗುತ್ತಾನೆ. ದೀಪಾವಳಿ ಮುಗಿದ ನಂತರದ ಮುಂದಿನ ಎರಡು ದಿನಗಳನ್ನು ಅಕ್ಕನ ತದಿಗೆ ಮತ್ತು ಭಾವನ ಬಿದಿಗೆ ಎಂದು ಆಚರಿಸುವ ಪದ್ದತಿ ಕೂಡ ಹಲವೆಡೆಗಳಲ್ಲಿ ಇದೆ.